ಹಿಜಾಬ್ ಧರಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ಇಲ್ಲ; ಹೊಸ ಶಾಲೆಗಳ ಆರಂಭಕ್ಕೆ ಎನ್ ಒಸಿಗೆ ಸಚಿವರ ಬಳಿ ಬರಬೇಕಿಲ್ಲ: ಬಿ ಸಿ ನಾಗೇಶ್

 ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ (Hijab) ಧರಿಸುವುದಕ್ಕೆ ನಿಷೇಧ ಹೇರಿರುವ ರಾಜ್ಯ ಸರ್ಕಾರದ ಆದೇಶದ ವಿರುದ್ಧ ವಿದ್ಯಾರ್ಥಿನಿಯರ ಸಮೂಹ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಬರುವ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು. 


                                                                          ಬಿ ಸಿ ನಾಗೇಶ್

By : Rekha.M
Online Desk

ಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ (Hijab) ಧರಿಸುವುದಕ್ಕೆ ನಿಷೇಧ ಹೇರಿರುವ ರಾಜ್ಯ ಸರ್ಕಾರದ ಆದೇಶದ ವಿರುದ್ಧ ವಿದ್ಯಾರ್ಥಿನಿಯರ ಸಮೂಹ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಬರುವ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು. 

ಅದರ ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿರುವ ಬೆನ್ನಲ್ಲೇ ಇದೇ ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ (PUC Exams 2023) ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್, ಮಾರ್ಚ್​ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ ಧರಿಸುವುದಕ್ಕೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಧ ಜಿಲ್ಲೆಗಳಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು. ಆದರೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಇಂತಹ ಮನವಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ.

ಇದೀಗ ಸ್ವತಃ ಶಿಕ್ಷಣ ಸಚಿವ ಬಿಸಿ ನಾಗೇಶ್​ ಪ್ರತಿಕ್ರಿಯಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಹಿಜಾಬ್​ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್​ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ನಿರ್ಧಾರ ಪ್ರಕಟಿಸಿದ್ದಾರೆ. 

ಖಾಸಗಿ ಶಾಲೆಗಳನ್ನು ತೆರೆಯಲು, ನವೀಕರಣಕ್ಕೆ ನಿಯಮ: ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಶಾಲೆಗಳನ್ನು ತೆರೆಯಲು ಮತ್ತು ನವೀಕರಣಕ್ಕೆ ಸರ್ಕಾರದಿಂದ ಎನ್ಒಸಿ ಕಡ್ಡಾಯವಾಗಿ ಪಡೆಯಬೇಕು. ಸರ್ಕಾರದ ಪೋರ್ಟಲ್ ವ್ಯವಸ್ಥೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನವನ್ನು ಸರಳಗೊಳಿಸಲಾಗಿದ್ದು, ಪಾರದರ್ಶಕವಾಗಿದೆ. ಎನ್ಒಸಿ ತಕ್ಷಣವೇ ಸಿಗುವಂತೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಎನ್ಒಸಿ (No Objection certificate) ಪಡೆಯಲು ಸಚಿವರು, ಕಮಿಷನರ್, ಕಾರ್ಯದರ್ಶಿಗಳ ಬಳಿ ಬರಬೇಕಾಗಿಲ್ಲ. ಆನ್ ಲೈನ್ ನಲ್ಲಿಯೇ ದೊರಕುತ್ತದೆ ಎಂದರು.Post a Comment

Previous Post Next Post