ಟಿಕೆಟ್ ಘೋಷಣೆ ಬೆನ್ನಲ್ಲೇ ಬಂಡಾಯ ಬಿಸಿ: ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಲಕ್ಷ್ಮಣ ಸವದಿ, ಸರದಿಯಲ್ಲಿ ಇನ್ನೂ ಹಲವರು!

 ರಾಜ್ಯ ಬಿಜೆಪಿಯಿಂದ ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ 189 ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಕೈತಪ್ಪಿಹೋದ ಹಾಲಿ ಶಾಸಕರು ಮತ್ತು ಸಚಿವರಿಂದ ಅಸಮಾಧಾನ, ಬಂಡಾಯ ವ್ಯಕ್ತವಾಗುತ್ತಿದೆ.

                                                                       ಲಕ್ಷ್ಮಣ ಸವದಿ
By : Rekha.M
Online Desk

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್, ಸುರೇಶ್ ಕುಮಾರ್ ಸೇರಿದಂತೆ 22 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ.

ಈ ನಿಟ್ಟಿನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಕೆ.ಎಸ್. ಈಶ್ವರಪ್ಪ, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳ್ಳುವುದಾಗಿ ಹೇಳಿದ್ದಾರೆ. ಇನ್ನೂಂದೆಡೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಹೇಳಿದ್ದರೂ ಚುನಾವಣೆಗೆ ಸ್ಪರ್ಧಿಸುವುದಾಗಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

ಈ ಕುರಿತು ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ಈ ಹಿಂದೆಯೂ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಈಶ್ವರಪ್ಪ ಹೇಳಿದ್ದರು.ಆದರೆ ಅವರ ಅನುಭವ ಬೇಕಿರುವುದರಿಂದ ಸ್ಪರ್ಧಿಸುವಂತೆ ಹೇಳಿದ್ದೆವು, ಈಗ ಈ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಹೈಕಮಾಂಡ್ ನಿರ್ಧಾರ ಒಂದು ನಿರ್ಧಿಷ್ಟ ವಯಸ್ಸಿನ ನಂತರ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದು ಯುವಕರಿಗೆ ಅವಕಾಶ ಮಾಡಿಕೊಡಬೇಕು ಎಂಬ ಸಂದೇಶ ನೀಡಿದೆ. ಇದು ಕೇಂದ್ರ ಹಾಗೂ ರಾಜ್ಯಗಳಲ್ಲಿರುವ ಬಿಜೆಪಿ ಸಂಸ್ಕೃತಿ ಎಂದು ತಿಳಿಸಿದರು.

ಹಲವು ಸುತ್ತಿನ ಮಾತುಕತೆಯ ನಂತರ ಎಲ್ಲವನ್ನು ನಿರ್ಧರಿಸಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇಂದು ಸಂಜೆಯೊಳಗೆ ಸುಮಾರು 150 ಸ್ಥಾನಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 


Post a Comment

Previous Post Next Post