ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

 ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ 'ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

                                                       ಸಿಎಂ ಸಿದ್ದರಾಮಯ್ಯ

Posted By : Deepika.C
Source : Online Desk

ಬೆಂಗಳೂರು: ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ 'ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ  ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದರು. 

ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು  ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು. 

We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ.  ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು. 

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆದಾಗ ಮಾತ್ರ ಸರ್ವರಿಗೂ ಸಮಪಾಲು- ಸಮಬಾಳು ಸಮಾಜವನ್ನು ಕಟ್ಟಲು ಸಾಧ್ಯ. ಸಂವಿಧಾನ ಗಟ್ಟಿ ಇರುವ ಕಾರಣದಿಂದ ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಂದಿರುವುದು. ನೀವು, ನಾವೆಲ್ಲ ಕೈ ಜೋಡಿಸಿ ಒಟ್ಟಿಗೆ ನಡೆಯೋಣ, ಎಲ್ಲರ ಸಹಕಾರ ಸರ್ಕಾರದ ಜೊತೆ ಇದ್ದರೆ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ವಿಧಾನಪರಿಷತ್  ಸಭಾಪತಿ ಹೊರಟ್ಟಿ ಸೇರಿದಂತೆ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

 ಈ ಕಾರ್ಯಕ್ರಮಕ್ಕೆ ರಾಜ್ಯ, ದೇಶ, ವಿದೇಶಗಳಿಂದ ನೋಂದಣಿಯಾಗಿದ್ದ ಜನರು ತಾವಿರುವ ಸ್ಥಳದಲ್ಲಿಯೇ ಸಂವಿಧಾನ ಪೀಠಿಕೆ ಓದಿದರು. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. 




Post a Comment

Previous Post Next Post