ಬರ ಪರಿಹಾರ ಕಾರ್ಯಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ

 ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

                                                        ಸಿಎಂ ಸಿದ್ದರಾಮಯ್ಯ

Posted By :Rekha.M
Source : Online Desk

ಬೆಂಗಳೂರು: ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ನಿರ್ವಹಣೆಗೆ-ಬರ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ರೂ.800 ಕೋಟಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಮೀನ-ಮೇಷ ಎಣಿಸುತ್ತಿದೆ. ಬರ ಪರಿಸ್ಥಿತಿ ಸಂದರ್ಭದಲ್ಲಿ 150 ದಿನ ಕೆಲಸ ನೀಡಬೇಕು. ಇದಕ್ಕಾಗಿ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಇದೇ ವೇಳೆ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿಗೆ ಏನು ಗೊತ್ತಿಲ್ಲ. 800 ಕೋಟಿಗೂ ಹೆಚ್ಚು ಬರ ಪರಿಹಾರದ ಹಣ ಬಿಡುಗಡೆ ಆಗಿದೆ. ಕೇಂದ್ರ ಸರ್ಕಾರದ ಬಳಿಯೂ ಬರ ಪರಿಹಾರಕ್ಕಾಗಿ ಮನವಿ ಮಾಡಿದ್ದೇವೆ. ಕೇಂದ್ರದಿಂದ ಈವರೆಗೂ ಯಾವುದೇ ರೀತಿಯಾದ ಅನುದಾನ ಬಂದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿ ಅವರು ಆಧಾರ ರಹಿತ ಆರೋಪಗಳ ಮೂಲಕ ನಗೆಪಾಟಲಿಗೀಡಾಗುತ್ತಿದ್ದಾರೆ. ಕುಮಾರಸ್ವಾಮಿ ಯಾವುದೇ ಆಧಾರವಿಲ್ಲದೆ ಅಪಪ್ರಚಾರ ಮಾಡುತ್ತಿದ್ದಾರೆ. ಜನ ಇದನ್ನೆಲ್ಲ ನೋಡುತ್ತಾ ಅವರನ್ನು ನೋಡಿ ನಗುತ್ತಿದ್ದಾರೆ. ಇದರಿಂದ ಅವನಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿ ಅವರು ಕನಕಪುರ ಕ್ಷೇತ್ರಕ್ಕೆ ತೆರಳಿ ಶಿವಕುಮಾರ್ ಅವರು ಬ್ಲ್ಯೂಫಿಲಂ ತೋರಿಸುತ್ತಿದ್ದಾರೆ ಎಂದು ಪಕ್ಷದ ಕಾರ್ಯಕ್ತರು ಸೇರಿದಂತೆ ಕ್ಷೇತ್ರದ ಜನರನ್ನು ಕೇಳಲು. ಒಂದು ವೇಳೆ ಜನರು ನನ್ನನ್ನು ತಪ್ಪಿತಸ್ಥನೆಂದು ಹೇಳಿದ್ದೇ ಆದರೆ, ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ನಿಮ್ಮ ಆರೋಪಗಳನ್ನು ಸಾಬೀತುಪಡಿಸಲು ನಿಮಗೆ ಸಾಧ್ಯವಾಗದಿದ್ದರೆ, ನೀವು ಏನು ಮಾಡುತ್ತೀರಿ? ಎಂದು ಸವಾಲು ಹಾಕಿದರು.

ಬಳಿಕ ಬೆಂಗಳೂರಿನಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ತಾಯಿ ಮತ್ತು ಮಗು ಸಾವನ್ನಪ್ಪಿದ ಘಟನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಗಂಭೀರ ವಿಚಾರವಾಗಿದ್ದು, ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ಗುಪ್ತ ಕೇಬಲ್‌ಗಳನ್ನು ಬದಲಾಯಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.


Post a Comment

Previous Post Next Post